ಬೆಳ್ತಂಗಡಿ : ಅಪರಿಚಿತ ವ್ಯಕ್ತಿ ಹತ್ಯೆ, ಮೂವರ ಬಂಧನ

ಬೆಳ್ತಂಗಡಿ : ಬೆಳ್ತಂಗಡಿ ಸಮೀಪದ ಗುರುವಾಯನಕೆರೆ ಬಳಿಯ ಅಲಾದಿಕೊಟ್ಟಿಗೆಯಲ್ಲಿ ಪತ್ತೆಯಾಗಿದ್ದ ಅಪರಿಚಿತ ಮೃತದೇಹ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯಾಗಿದ್ದು, ಪೊಲೀಸರು ಮೂವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

ಈ ಬಗ್ಗೆ ಮೃತರ ಸಹೋದರ ನಿತಿನ್ (34) ಅವರು ಪೊಲೀಸರಿಗೆ ದೂರು ನೀಡಿದ್ದಾರೆ. ಸೋಮವಾರ ಬೆಳಿಗ್ಗೆ ವಾಟ್ಸಾಪ್ ಮೂಲಕ ಮೃತದೇಹದ ಭಾವಚಿತ್ರವೊಂದು ಲಭ್ಯವಾಗಿದ್ದು, ಅದನ್ನು ನೋಡಿದ ಕೂಡಲೇ ನಿತಿನ್ ಅವರು ತಮ್ಮ ಸಹೋದರ ಯತೀಶ್ ಎಂದು ಗುರುತಿಸಿದ್ದಾರೆ.
ಘಟನಾ ಸ್ಥಳಕ್ಕೆ ತೆರಳಿ ಸ್ಥಳೀಯ ಸಿಸಿಟಿವಿ ಕ್ಯಾಮೆರಾಗಳನ್ನು ಪರಿಶೀಲಿಸಿದಾಗ, ಜೂನ್ 1 ರ ಬೆಳಗಿನ ಜಾವ ಯತೀಶ್ ಅವರ ಮೇಲೆ ಮೂವರು ವ್ಯಕ್ತಿಗಳು ಹಲ್ಲೆ ನಡೆಸುತ್ತಿರುವುದು ಕಂಡುಬಂದಿದೆ. ಈ ಕೃತ್ಯದಲ್ಲಿ ಬೆಳ್ತಂಗಡಿ ಮಿತ್ತಬಾಗಿಲು ನಿವಾಸಿ ಯಶೋಧರ (35), ಕಡಬ ಚಾರ್ವಾಕ ನಿವಾಸಿ ಮೋಹನ್ (30) ಹಾಗೂ ಬೆಳ್ತಂಗಡಿ ಪದಂಗಡಿಯ ಇಬ್ರಾಹಿಂ (54) ಭಾಗಿಯಾಗಿರುವುದಾಗಿ ದೂರಿನಲ್ಲಿ ಉಲ್ಲೇಖಿಸಲಾಗಿದೆ. ದೂರಿನ ಆಧಾರದ ಮೇಲೆ ಪೊಲೀಸರು ಮೂವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
ಆರೋಪಿಗಳ ಹಲ್ಲೆಯಿಂದಲೇ ಯತೀಶ್ ಮೃತಪಟ್ಟಿದ್ದಾರೆ ಎಂದು ದೂರುದಾರರು ತಿಳಿಸಿದ್ದಾರೆ.
ಈ ಕುರಿತು ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ 65/2026 ರ ಅಡಿ ಪ್ರಕರಣ ದಾಖಲಾಗಿದೆ. ಭಾರತೀಯ ನ್ಯಾಯ ಸಂಹಿತೆ (BNS) ಕಲಂ 115(2), 103 ಹಾಗೂ 3(5) ರ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ಆರೋಪಿಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
